ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಮಂಡಲದ ಅಧಿವೇಶನ ಮುಂದಕ್ಕೆ ಹಾಕುವುದು ಸ್ಪೀಕರ್ ಅವರಿಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅಂಬೇಡ್ಕರ್ ಪುಣ್ಯ ತಿಥಿ ಅಂಗವಾಗಿ ವಿಧಾನಸೌಧದ ಮುಂಭಾಗ ಅವರ ಪ್ರತಿಮೆಗೆ ಹೂ ಮಾಲೆ ಅರ್ಪಿಸಿದ ನಂತರ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ಅಧಿವೇಶನ ನಡೆಸುವ ಸಂಬಂಧ ಸರ್ಕಾರದ ಕಡೆಯಿಂದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ, ಚುನಾವಣೆ ಆಗಮಿಸುತ್ತಿರುವ ಕಾರಣ ಅಧಿವೇಶನ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಿಧಾನ ಮಂಡಲ ಉಭಯ ಸದನಗಳ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಬೇಕು. ಇದರಲ್ಲಿ ಸರ್ಕಾರದ ಪಾತ್ರವೇನೂ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಅಧಿವೇಶನದಲ್ಲೇ ಉತ್ತರ : ಅಕ್ರಮ ಗಣಿಗಾರಿಕೆ ಕುರಿತ ಪ್ರತಿಪಕ್ಷಗಳ ಪ್ರಶ್ನೆಗೆ ಅಧಿವೇಶನದಲ್ಲೇ ಉತ್ತರಿಸುತ್ತೇನೆ. ನಮ್ಮ ಸರ್ಕಾರ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿಲ್ಲ ಹಾಗೂ ಹೊಸ ಗಣಿ ಲೈಸೆನ್ಸ್ಗೆ ಅನುಮತಿ ನೀಡಿಲ್ಲ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.