ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸಂಬಂಧ ರಾಜಕೀಯ ನಾಯಕರುಗಳ ನಡುವಿನ ಕೆಸರೆರಚಾಟ ಮುಂದುವರಿದಿದ್ದು, ಅಕ್ರಮ ಗಣಿಗಾರಿಕೆಯಲ್ಲಿ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರ ಪಾಲುದಾರಿಕೆ ಇರಬೇಕೆಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಉಗ್ರಪ್ಪ ಶಂಕೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗಣಿಯನ್ನು ಲೂಟಿ ಮಾಡುತ್ತಿದ್ದರೂ ಕೂಡ ಮುಖ್ಯಮಂತ್ರಿ ಯಡಿಯೂರಪ್ಪ ಗಣಿಧಣಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ದೂರಿದರು. ರಾಜ್ಯ ನಾಯಕರು ಸೇರಿದಂತೆ ಪ್ರಮುಖ ರಾಜಕೀಯ ಧುರೀಣರೇ ಈ ಅಕ್ರಮ ಗಣಿಗಾರಿಕೆಯಲ್ಲಿ ಪಾಲುದಾರರಿಬೇಕು ಎಂಬ ಶಂಕೆಯ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ಆ ನೆಲೆಯಲ್ಲಿ ಬಳ್ಳಾರಿಗೆ ಪದೇ, ಪದೇ ಹೋಗುವವರು ಸೇರಿದಂತೆ ಯಾರೆಲ್ಲ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆಂಬ ವಿವರ ಬಯಲಾಗಲಿದೆ ಎಂದರು. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಗಣಿಧಣಿಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.