ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರವಾಗಿ ಆಪಾದಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ಅನಾವಶ್ಯಕವಾಗಿ ಆಡಳಿತಾರೂಢ ಸರ್ಕಾರದ ವಿರುದ್ಧ ಇಲ್ಲ-ಸಲ್ಲದ ಆರೋಪಗಳಲ್ಲಿ ತೊಡಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಆರೋಪಗಳನ್ನು ಹೊರಿಸುತ್ತಿದ್ದಾರೆ. ಅವರಿಗೆ ವಿಧಾನಸಭೆ ಅಧಿವೇಶನದಲ್ಲೇ ತಕ್ಕ ಉತ್ತರ ನೀಡುವುದಾಗಿ ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿನ ಅಕ್ರಮಗಣಿಗಾರಿಕೆ ಬಗ್ಗೆ ಕಾಂಗ್ರೆಸ್, ಜೆಡಿಎಸ್ ಮುಖಂಡರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಶಾಮೀಲಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಹೀಗೆ ಸುಮ್ಮನೆ ಆರೋಪ ಮಾಡುವ ಬದಲು ಸೂಕ್ತ ದಾಖಲೆಯೊಂದಿಗೆ ಚರ್ಚೆಗೆ ಬನ್ನಿ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದರು.