ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರ ಕೃತ್ಯವನ್ನು ಖಂಡಿಸಿ ರೈತ ಸಂಘಟನೆಗಳು ಶನಿವಾರ ಚಾಮರಾಜನಗರ ಬಂದ್‌ಗೆ ಕರೆ ನೀಡಿದ್ದು, ವರ್ತಕರ ಸಂಘ ಕೂಡ ಬಂದ್‌ಗೆ ಬೆಂಬಲ ಸೂಚಿಸಿವೆ.
ಶುಕ್ರವಾರ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು, ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಏಕಾಏಕಿ ಲಾಠಿ ಪ್ರಹಾರ ನಡೆಸಿದ್ದರು. ಘಟನೆಯಲ್ಲಿ ಹಲವಾರು ರೈತರು ಗಾಯಗೊಂಡಿದ್ದರು. ಅಲ್ಲದೆ ರೈತ ಮುಖಂಡರನ್ನು ಬಂಧಿಸಿದ್ದರು.
ಆ ನಿಟ್ಟಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು ಖಂಡಿಸಿ ಇಂದು ರೈತ ಸಂಘಟನೆಗಳು ಚಾಮರಾಜನಗರ ಬಂದ್‌ಗೆ ಕರೆ ನೀಡಿವೆ. ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದು, ವಾಹನ ಸಂಚಾರ ಕೂಡ ಸ್ಥಗಿತಗೊಂಡಿದೆ.
ಯಾವುದೇ ಅಹಿತಕರ ಘಟನೆ, ಪ್ರತಿಭಟನೆ, ಮೆರವಣಿಗೆ ನಡೆಸದಂತೆ ಸೂಚಿಸಿರುವ ಪೊಲೀಸ್ ವರಿಷ್ಠಾಧಿಕಾರಿಗಳು, ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಅಧಿಕಾರಿಗಳಿಂದ ವಿವರಣೆ ಕೇಳ್ತಿನಿ: ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಏಕಾಏಕಿ ಲಾಠಿ ಪ್ರಹಾರ ನಡೆಸಿದ ಘಟನೆ ಕುರಿತು ಪೊಲೀಸ್ ಅಧಿಕಾರಿಗಳಿಂದ ವಿವರಣೆ ಕೇಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಸರಿಯಾದ ಕ್ರಮವಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.