ಚಾಮರಾಜನಗರ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಏಕಾಏಕಿ ಲಾಠಿ ಪ್ರಹಾರ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರೈತ ವಿರೋಧಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಚಾಮರಾಜನಗರದಲ್ಲಿ ಶಾಂತಿ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಅಟ್ಟಹಾಸ ಮರೆದಿದ್ದಾರೆ. ದಾವಣಗೆರೆ ಯಲ್ಲೂ ಮುಗ್ದ ರೈತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿದ ಬಳ್ಳಾರಿ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿದ ಅವರು, ಬಂಧಿತ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ತನ್ನ ಅಧಿಕಾರವಧಿಯಲ್ಲಿ ಗಣಿಗಾರಿಕೆಗೆ ಗುತ್ತಿಗೆ ನೀಡಿಲ್ಲ ಎಂದು ಹೇಳುವ ಮುಖ್ಯಮಂತ್ರಿಗಳು ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ದೇವರು ಮತ್ತು ರಾಜ್ಯದ ಜನರ ಬಗ್ಗೆ ಯಡಿಯೂರಪ್ಪ ಅವರಿಗೆ ಗೌರವ ಇದ್ದರೆ ಗಣಿಗಾರಿಕೆ ಬಗ್ಗೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.