ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರ ವಾಗ್ದಾಳಿ ಮುಂದುವರಿದಿದ್ದು,ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಜೈಲಿಗೆ ಹೋಗುವುದು ಖಚಿತ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಾಗಿ ಶನಿವಾರ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗಣಿಗಾರಿಕೆಯಿಂದ ಸಾವಿರಾರು ಕೋಟಿ ರೂಪಾಯಿ ಹಣ ಲೂಟಿ ಹೊಡೆಯುತ್ತಿದ್ದರು ಕೂಡ ಮುಖ್ಯಮಂತ್ರಿಗಳು ರೆಡ್ಡಿ ಸಹೋದರರ ವಿರುದ್ಧ ಸಿಬಿಐ ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವುದನ್ನು ಗಮನಿಸಿದರೆ ಅವರು ಪಾಲುದಾರಿಕೆ ಹೊಂದಿದ್ದಾರೆ ಎಂಬ ಶಂಕೆ ಮೂಡುತ್ತದೆ ಎಂದು ದೂರಿದರು.
ಅಕ್ರಮ ಗಣಿಗಾರಿಕೆ ಕುರಿತಂತೆ ರಾಜ್ಯದಲ್ಲಿಯೂ ಸಿಬಿಐ ತನಿಖೆ ನಡೆದರೆ ಯಡಿಯೂರಪ್ಪ ಹಾಗೂ ಸುಷ್ಮಾ ಸ್ವರಾಜ್ ಕೂಡ ಕಂಬಿ ಎಣಿಸಬೇಕಾಗುತ್ತದೆ ಎಂದು ಹೇಳಿದರು.
ಅಕ್ರಮ ಗಣಿಗಾರಿಕೆ ವಿರುದ್ಧ ಆಂಧ್ರಪ್ರದೇಶ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದಾಗ ಸ್ವತಃ ಜನಾರ್ದನ ರೆಡ್ಡಿಯೇ ಸ್ವಾಗತಿಸಿರುವಾಗ, ಮುಖ್ಯಮಂತ್ರಿಗಳು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರಶ್ನಿಸಿದರು.