ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಚಾಮರಾಜನಗರದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಏಕಾಏಕಿ ಲಾಠಿ ಪ್ರಹಾರ ನಡೆಸಿರುವ ಘಟನೆಯ ಕುರಿತು ಪ್ರಾದೇಶಿಕ ಆಯುಕ್ತರಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ.
ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ್ದ ಘಟನೆಯನ್ನು ಖಂಡಿಸಿ ಶನಿವಾರ ರೈತ ಸಂಘಟನೆಗಳು ಚಾಮರಾಜನಗರ ಬಂದ್‌ಗೆ ಕರೆ ನೀಡಿದ್ದವು. ಅಲ್ಲದೇ, ಬಂಧಿತ ರೈತರ ಬಿಡುಗಡೆ ಮಾಡಿ, ರೈತರೊಂದಿಗೆ ಕೂಡಲೇ ಮಾತುಕತೆ ನಡೆಸಬೇಕೆಂದು ರೈತ ಸಂಘದ ಮುಖಂಡರಾದ ಪುಟ್ಟಣ್ಣಯ್ಯ, ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಬಂಧಿಸಿರುವ ರೈತರನ್ನು ಕೂಡಲೇ ಬಿಡುಗಡೆಗೊಳಿಸಿ ಅವರ ಮೇಲೆ ಹಾಕಲಾಗಿದ್ದ ಎಲ್ಲ ಮೊಕದ್ದಮೆ ಹಿಂಪಡೆದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಸರಿಯಾದ ಕ್ರಮವಲ್ಲ ಎಂದು ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಇಂಥ ಘಟನೆ ಮರುಕಳಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದಾರೆ.