'ಸಿದ್ದರಾಮಯ್ಯ ಸಿಎಂ ಆಗುವುದಾದ್ರೆ ತಮ್ಮ ಅಭ್ಯಂತರವಿಲ್ಲ' ಎಂದು ಹೇಳಿಕೆ ನೀಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೃತಜ್ಞತೆ ಸಲ್ಲಿಸಿರುವ ಸಿದ್ದರಾಮಯ್ಯ, ಈ ಬಗ್ಗೆ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಬೇಡ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿಗೆ ಗೌಡರು ಭೇಟಿ ನೀಡಿದ್ದ ಸಂದರ್ಭದಲ್ಲಿ, ಸಿದ್ದರಾಮಯ್ಯ ಅವರು ಸಿಎಂ ಆಗುವುದಾದ್ರೆ ತಮ್ಮ ಅಭ್ಯಂತರ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದರು.
ಇದೀಗ ಗೌಡರ ಹೇಳಿಕೆಗೆ ಸಂತಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ದೇವೇಗೌಡರ ಹೇಳಿಕೆಯಲ್ಲಿ ಯಾವುದೇ ದುರುದ್ದೇಶವಿಲ್ಲ. ಆ ನಿಟ್ಟಿನಲ್ಲಿ ಗೌಡರ ಹೇಳಿಕೆ ಬಗ್ಗೆ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಬೇಡ ಎಂದು ಮಾರ್ಮಿಕವಾಗಿ ತಿಳಿಸಿದ್ದಾರೆ.
ತಮ್ಮ ಕುರಿತು ಒಳ್ಳೆಯ ಅಭಿಪ್ರಾಯವ್ಯಕ್ತಪಡಿಸಿದ್ದಕ್ಕೆ ಹಿರಿಯರಾದ ಗೌಡರಿಗೆ ಅಭಿನಂದನೆ ಸಲ್ಲಿಸುವುದಾಗಿಯೂ ಈ ಸಂದರ್ಭದಲ್ಲಿ ನುಡಿದರು.ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಸರ್ಕಾರ ಪತನವಾದಲ್ಲಿ,ನಂತರ ನಡೆಯುವ ಬೆಳವಣಿಗೆ ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳುವ ಮೂಲಕ ತಾವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂಬುದನ್ನು ಹೊರಗೆಡವಿದರು.