ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 23ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಒಟ್ಟು 25 ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೆತ್ರಗಳಲ್ಲಿ ಅವಿರೋಧ ಆಯ್ಕೆಯಾಗಿದ್ದು, ಉಳಿದ 23 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ.
ಚುನಾವಣೆ ಬಹಿರಂಗ ಪ್ರಚಾರ ನಿನ್ನೆ ಸಂಜೆ ಮುಕ್ತಾಯಗೊಂಡಿದೆ. ಈಗಾಗಲೇ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ ಪತ್ರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದ್ದಾರೆ.
ನಾಳೆ ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ, ವಿಧಾನಸಭೆ, ಲೋಕಸಭೆ, ರಾಜ್ಯಸಭೆ ಸದಸ್ಯರುಗಳು ಮತದಾರರಾಗಿದ್ದಾರೆ. ಅಲ್ಲದೆ, ನಾಮ ನಿರ್ದೇಶಿತ ಸದಸ್ಯರೂ ಕೂಡ ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.
ಡಿಸೆಂಬರ್ 21ರಂದು ಬೆಳಿಗ್ಗೆ 8ಗಂಟೆಗೆ ಮತ ಎಣಿಕೆ ಆರಂಭಗೊಳ್ಳಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಡಿಸೆಂಬರ್ 24ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.