ಸಿದ್ದರಾಮಯ್ಯ ಸಿಎಂ-ಎಚ್‌ಡಿಕೆ ಕೇಂದ್ರ ಮಂತ್ರಿ: ಧರಂ ಭವಿಷ್ಯ
ಸಂಕಟದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ?
ಗುಲ್ಬರ್ಗಾ, ಶುಕ್ರವಾರ, 18 ಡಿಸೆಂಬರ್ 2009( 19:11 IST )
NRB
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶೀಘ್ರದಲ್ಲಿಯೇ ಪತನವಾಗಲಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಕೂಡ ಧ್ವನಿಗೂಡಿಸಿದ್ದಾರೆ.
ಅಹಿಂದ ಮುಖಂಡ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದು, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಬಿಜೆಪಿ ಸರ್ಕಾರ ಕೂಡಲೇ ಪತನವಾಗಲಿದೆ ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕುರಿತು ದೇವೇಗೌಡರ ಜೊತೆ ಮಾತುಕತೆ ನಡೆಸಲಾಗಿದೆ ಎಂದರು. ಆಂತರಿಕ ಕಲಹದಿಂದಾಗಿಯೇ ಆಡಳಿತಾರೂಢ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ ಎಂದ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದ ವೈಖರಿಗೆ ಜನರು ಬೇಸತ್ತಿದ್ದಾರೆ ಎಂದು ನುಡಿದರು.
'ನಾನು ಮುಖ್ಯಮಂತ್ರಿ ಆಗ್ತೇನೆ ಎಂಬುದು ಧರಂ ಸಿಂಗ್ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೆ ಸರ್ಕಾರ ಪತನವಾಗುತ್ತೋ ಇಲ್ಲವೋ ಗೊತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಬಹುಮತ ಇರುವಾಗ ಪತನ ಆಗುತ್ತೇ ಅಂತ ನಾನು ಹೇಗೆ ಭವಿಷ್ಯ ಹೇಳಲಿ' ಎಂದು ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರತಿಕ್ರಿಯಿಸಿದ್ದಾರೆ.
ಇನ್ನೆರಡು ದಿನದಲ್ಲಿ ಸಿಹಿ ಸುದ್ದಿ!: ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಇನ್ನೆರಡು ದಿನಗಳಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಲಿದ್ದಾರೆ ಎಂದು ಶಾಸಕ ಜಮೀರ್ ಅಹಮ್ಮದ್ ಕೂಡ ಹೇಳುವ ಮೂಲಕ ರಾಜಕೀಯ ಪಕ್ಷಗಳ ಈ ಹೇಳಿಕೆಗಳ ಹಿಂದಿನ ಮರ್ಮವೇನು ಎಂಬ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಒಟ್ಟಿನಲ್ಲಿ ಬಿಜೆಪಿ ಸರ್ಕಾರ ಸಂಕಷ್ಟದಲ್ಲಿದೆಯೇ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡತೊಡಗಿದೆ.