ಶಿಸ್ತಿನ ಪಕ್ಷದಲ್ಲಿ ಯಾವುದೇ ಬಿಕ್ಕಟ್ಟಿಲ್ಲ: ವೆಂಕಯ್ಯ ನಾಯ್ಡು
ಬೆಂಗಳೂರು, ಸೋಮವಾರ, 21 ಡಿಸೆಂಬರ್ 2009( 12:00 IST )
NRB
ಭಾರತೀಯ ಜನತಾ ಪಕ್ಷ ಶಿಸ್ತಿನ ಪಕ್ಷವಾಗಿದ್ದು, ರಾಜ್ಯರಾಜಕಾರಣದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಸಂಪೂರ್ಣ ಐದು ವರ್ಷಗಳ ಕಾಲ ಆಡಳಿತ ನಡೆಸುತ್ತದೆ ಎಂದು ಬಿಜೆಪಿ ಹಿರಿಯ ಮುಖಂಡ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಭಾನುವಾರ ಅವರು ನಗರ ಜಿಲ್ಲೆಯ ಜಿಲ್ಲಾ ಪರಿಷತ್ ಸಭಾಂಗಣದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮರು ಮತದಾನ ಮಾಡಿದ ನಂತರ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳ ಸದಸ್ಯರಲ್ಲಿ ಅಸಮಾಧಾನ ಇರುವುದು ಸಹಜ ಎಂದರು.
ರಾಜ್ಯದಲ್ಲಿ ಕೆಲವು ಶಾಸಕರಲ್ಲಿ ಭಿನ್ನಾಭಿಪ್ರಾಯ ಇದ್ದು, ಆ ಬಗ್ಗೆ ಪಕ್ಷದ ವರಿಷ್ಠರು ಮತ್ತು ಹಿತೈಷಿಗಳೊಡನೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಪಕ್ಷಗಳು ಅನಾವಶ್ಯಕವಾಗಿ ರಾಜ್ಯ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಯತ್ನ ಮಾಡುತ್ತಿರುವುದು ಅಲ್ಲದೇ, ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ವಿಫಲ ಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದರು.