ಸದನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸರ್ಕಾರದಿಂದ ಉತ್ತರ ಬರುತ್ತಿಲ್ಲ ಎಂದು ವಿಧಾನಸಭೆಯಲ್ಲಿ ಸೋಮವಾರ ಆರಂಭಗೊಂಡ ಕಲಾಪದಲ್ಲಿ ವಿರೋಧಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಚರ್ಚೆ, ವಾಗ್ವಾದಗಳಿಗೆ ಎಡೆಮಾಡಿಕೊಟ್ಟಿತು.
ಪ್ರಶ್ನೋತ್ತರ ಅವಧಿಯಲ್ಲಿ ಇಂದು ಕೆಲ ಪ್ರಶ್ನೆಗಳನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ಕೆಲ ಪ್ರಶ್ನೆಗಳಿಗೆ ಉತ್ತರ ನೀಡಲು ಕಾಲಾವಕಾಶ ಬೇಕೆಂದು ಸಭಾಧ್ಯಕ್ಷ ಬೋಪಯ್ಯ ಹೇಳಿದ್ದು, ವಿರೋಧ ಪಕ್ಷದ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿತ್ತು.
ಸದನದಲ್ಲಿ ಸದಸ್ಯರಿಗೆ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲು ಸರ್ಕಾರಕ್ಕೆ ಆಸಕ್ತಿ ಇಲ್ಲ, ಇದು ಬೇಜವಾಬ್ದಾರಿ ಎಂದು ವಿರೋಧದ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಮೊದಲ ದಿನವೇ ಹೀಗಾದರೇ ಹೇಗೆ ಎಂದು ಪ್ರಶ್ನಿಸಿದ ಅವರು ಸಭಾಧ್ಯಕ್ಷರು ಈ ಸರ್ಕಾರಕ್ಕೆ ಛೀಮಾರಿ ಹಾಕಬೇಕು ಎಂದರು.
ವಿರೋಧ ಪಕ್ಷದ ನಾಯಕರಿಗೆ ಬೆಂಬಲ ನೀಡಿ ಮಾತನಾಡಿದ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಸೇರಿದಂತೆ ಹಲವು ಸದಸ್ಯರು ಸರ್ಕಾರದ ವರ್ತನೆಯನ್ನು ತರಾಟೆಗೆ ತೆಗೆದುಕೊಂಡರು. ಈ ಹಂತದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ವಾಗ್ದಾಳಿ ನಡೆಯಿತು.