ಶಾಸ್ತ್ರೀಯ ಭಾಷೆ-ಕೇಂದ್ರ ತಾಳ್ಮೆ ಪರೀಕ್ಷಿಸುತ್ತಿದೆ: ಈಶ್ವರಪ್ಪ
ಶಿವಮೊಗ್ಗ, ಶನಿವಾರ, 9 ಜನವರಿ 2010( 11:14 IST )
NRB
ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಕನ್ನಡಿಗರ ತಾಳ್ಮೆ ಪರೀಕ್ಷಿಸುತ್ತಿದೆ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, 2ಸಾವಿರ ವರ್ಷಗಳ ಚರಿತ್ರೆ ಇರುವ ಕನ್ನಡ ಭಾಷೆಗೆ ಅಧಿಕೃತವಾಗಿ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡದಿದ್ದರೂ ಈವರೆಗೂ ಅದನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ವಿಫಲವಾಗಿದೆ.
ಶಾಸ್ತ್ರೀಯ ಸ್ಥಾನಮಾನಕ್ಕೆ ಅನುದಾನವನ್ನು ಇನ್ನೂ ಬಿಡುಗಡೆ ಮಾಡದೆ ಇರುವ ಕೇಂದ್ರ ಸರ್ಕಾರ ರಾಜ್ಯದ ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸ್ತ್ರೀಯ ಸ್ಥಾನಮಾನಕ್ಕೆ ಈ ಹಿಂದಿನ ಕನ್ನಡಿಗರ ಹೋರಾಟಗಳೇ ಸಾಕ್ಷಿಯಾಗಿದ್ದು, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅಗತ್ಯ ನೆರವು ನೀಡದಿದ್ದಲ್ಲಿ ಕನ್ನಡಿಗರು ಸಿಡಿದೇಳಬೇಕಾಗುತ್ತದೆ ಎಂದು ಎಚ್ಚರಿಸಿದರು.