ಕನ್ನಡ ಪರ ಹೋರಾಟದ ಸಂಘಟನೆಯಾಗಿ ಜನ್ಮ ತಳೆದಿದ್ದ ಕರ್ನಾಟಕ ರಕ್ಷಣಾ ವೇದಿಕೆ ಇನ್ನು ಮುಂದೆ ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಘೋಷಿಸಿದ್ದಾರೆ.
ಹೊಸಕೋಟೆ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗುರುವಾರ ಹಮ್ಮಿಕೊಂಡಿದ್ದ ಹೊಸಕೋಟೆ ಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಗಡಿ, ನೆಲ, ಜಲ ಹಾಗೂ ಭಾಷೆಯ ವಿಷಯದಲ್ಲಿ ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷ್ಯ ಧೋರಣೆ ತಾಳುವ ಮೂಲಕ ಕನ್ನಡಿಗರಿಗೆ ನ್ಯಾಯ ದೊರಕುವುದು ಸಾಧ್ಯವಿಲ್ಲ ಎಂದು ಮನಗಂಡಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಅಖಾಡಕ್ಕೆ ಇಳಿಯುವ ಸಾಧ್ಯತೆ ಇರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.