ಪಂಚಾಯತ್ ರಾಜ್ ವ್ಯವಸ್ಥೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ನಗರದ ಕಾರ್ಯಕ್ರಮವೊಂದರಲ್ಲಿ ಭಾವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರಾಮೀಣ ಪ್ರದೇಶದ ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಸರ್ಕಾರದ ಯೋಜನೆಗಳು ಸಮರ್ಪಕ ಅನುಷ್ಠಾನ ಮತ್ತು ಭ್ರಷ್ಟಾಚಾರ ತಡೆಯಲು ಓಂಬುಡ್ಸ್‌ಮನ್ ವ್ಯವಸ್ಥೆ ಜಾರಿ ಹಾಗೂ ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಉದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.
ಪಿಡಿಓ ನೇಮಕಾತಿ ವಿವಾದ ನ್ಯಾಯಾಲಯದಲ್ಲಿದ್ದು ಇನ್ನೆರಡು ತಿಂಗಳುಗಳಲ್ಲಿ ಅದರ ನೇಮಕಾತಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.