ಬಹುಕೋಟಿ ಮೌಲ್ಯದ ನಕಲಿ ಛಾಪಾ ಕಾಗದ ಹಗರಣದ ರೂವಾರಿ ಕರೀಂಲಾಲ್ ತೆಲಗಿಗೆ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ 10 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಾಲ್ಕು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ಈ ತೀರ್ಪು ನೀಡಿದ್ದು, ತೆಲಗಿಗೆ 50 ಸಾವಿರ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದಲ್ಲಿ, ಪ್ರಕರಣವೊಂದಕ್ಕೆ ಒಂದು ವರ್ಷ ಜೈಲು ಶಿಕ್ಷೆ ಹೆಚ್ಚಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಿದೆ.
ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಬದ್ರುದ್ದೀನ್ ಸೇರಿದಂತೆ ಉಳಿದ 19 ಮಂದಿ ಆರೋಪಿಗಳಿಗೆ ತಲಾ ಏಳು ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ. ಈ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ್ ಪಾಟೀಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಿದರು.