ರಾಜ್ಯದಲ್ಲಿ ವಿವಿಧ ಕೈಗಾರಿಕಾ ಯೋಜನೆಗಳಿಗಾಗಿ ವಶಪಡಿಸಿಕೊಳ್ಳುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಕೆಲ ರಾಜಕಾರಣಿಗಳೇ ದಲ್ಲಾಳಿಗಳಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತ ಜಾಗೃತಿ ಪ್ರವಾಸದ ಹಿನ್ನೆಲೆಯಲ್ಲಿ ಗುರುವಾರ ಗುಲ್ಬರ್ಗಾಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕೈಗಾರಿಕಾ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ರೈತರ ಸುಮಾರು 1.72ಲಕ್ಷ ಎಕರೆ ಜಮೀನನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದರು.
ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಗಣಿ ಮಾಫಿಯಾಗಿಂತ ಭೂ ಮಾಫಿಯಾವೇ ಹೆಚ್ಚಾಗಿದೆ ಎಂದು ಗಂಭೀರವಾಗಿ ಆರೋಪಿಸಿದ ಅವರು, ಆಡಳಿತಾರೂಢ ಬಿಜೆಪಿ ಸರ್ಕಾರದ ಕೆಲ ರಾಜಕಾರಣಿಗಳೇ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ದಲ್ಲಾಳಿಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ದೂರಿದರು.
ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಯ ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ, ಫೆ.23ರಂದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ರೈತರ ಸ್ಥಿತಿಗತಿ ಕುರಿತು ಮನವಿ ಪತ್ರ ಸಲ್ಲಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.