ರಾಜ್ಯಕ್ಕೆ ಹೆಚ್ಚಿನ ರೈಲ್ವೆ ಸೇವೆ ಕೊಡಿ: ಕೇಂದ್ರಕ್ಕೆ ರಾಜ್ಯ
ಬೆಂಗಳೂರು, ಗುರುವಾರ, 18 ಫೆಬ್ರವರಿ 2010( 17:08 IST )
ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ 19 ಹೊಸ ರೈಲು ಸಂಚಾರ, ನಾಲ್ಕು ರೈಲುಗಳ ವಿಸ್ತರಣೆ ಸೇರಿದಂತೆ ಹಲವು ಯೋಜನೆಗಳಿಗೆ ಅಂಗೀಕಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರಿಗೆ ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರವು ರಾಜ್ಯದಲ್ಲಿ ಕೈಗಾರಿಕಾ ವಲಯ ಸ್ಥಾಪಿಸುವ ಉದ್ದೇಶ ಹೊಂದಿದ್ದು, ಇದಕ್ಕೆ ಪೂರಕವಾಗಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚು ರೈಲ್ವೆ ಯೋಜನೆಗಳನ್ನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ರೈಲ್ವೆ ಇಲಾಖೆ ಉನ್ನತಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಮಧು ನೇತೃತ್ವದ ಅಧಿಕಾರಿಗಳ ತಂಡ ದೆಹಲಿಗೆ ತೆರಳಿ ಈ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕಾಗಿ ನಿರ್ಮಾಣ ವೆಚ್ಚದಲ್ಲಿ ಸಹಭಾಗಿತ್ವ ಹೊಂದಲು ಸಿದ್ಧ. ಮುಂದಿನ 5 ವರ್ಷಗಳಲ್ಲಿ 2529.80 ಕೋಟಿ ರೂ. ವಿನಿಯೋಗ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದು, ರಾಜ್ಯಕ್ಕೆ ಅಗತ್ಯವಿರುವ ರೈಲ್ವೆ ಯೋಜನೆಗಳನ್ನು ಮಂಜೂರು ಮಾಡುವಂತೆ ಕೋರಿದ್ದಾರೆ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಹಲವು ರೈಲು ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.