ನೈಸ್‌ಗೆ ಯೋಜನೆಗೆ ಸಂಬಂಧಿಸಿದಂತೆ ಅನಗತ್ಯವಾಗಿ ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಹೊರಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಈ ಯೋಜನೆ ವಿಚಾರದಲ್ಲಿ ಯಾರ ಕಾಲದಲ್ಲಿ ಯಾವ ಆದೇಶ ಆಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದವಿರುವುದಾಗಿ ಸವಾಲು ಹಾಕಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸ್ ಯೋಜನೆಗೆ ಕಾಂಗ್ರೆಸ್ ವಿರೋಧವಿಲ್ಲ. ಹೆಚ್ಚುವರಿ ಭೂಮಿ ನೀಡಿ ರಿಯಲ್ ಎಸ್ಟೇಟ್ ದಂಧೆ ನಡೆಸುವುದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕಿಡಿಕಾರಿದರು.
ನೈಸ್ ಸಂಸ್ಥೆ ಜೊತೆ ಶಾಮೀಲಾಗಿ ಬಿಜೆಪಿ ಸರ್ಕಾರ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದೆ ಎಂದು ಅವರು ಆರೋಪಿಸಿ ಈ ಯೋಜನೆ ಬಗ್ಗೆ ಬಹಿರಂಗ ಚರ್ಚೆ ನಡೆಸಿ ಯಾರು ಅವ್ಯವಹಾರದಲ್ಲಿ ಭಾಗಿದಾರರು ಎಂಬುದು ತಿಳಿಯುತ್ತದೆ ಎಂದರು. ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತಪ್ಪು ಮಾಡಿದ್ದರೆ ಕ್ಷಮೆ ಕೇಳಲು ತಾವು ಸಿದ್ದ ಎಂದು ಈ ಸಂದರ್ಭದಲ್ಲಿ ಹೇಳಿದರು.