ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ದೇವರು, ಧರ್ಮದ ಹೆಸರಲ್ಲಿ ಮುಗ್ದ ಜನರ ಶೋಷಣೆ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಏಕಾಏಕಿ ಗಂಭೀರವಾಗಿ ಆರೋಪಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಪೀಠದಲ್ಲಿ ಕುಳಿತು ಜನಸಾಮಾನ್ಯರಿಗೆ ನ್ಯಾಯ ನೀಡಲು ಸಾಧ್ಯವಿಲ್ಲ ಎಂದು ದೂರಿದರು.
ತಮ್ಮ ಉಸಿರು ಇರುವವರೆಗೂ ರೈತರ ಪರವಾಗಿ ಹೋರಾಟ ಮಾಡುವೆ. ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದರು.
ರಾಜ್ಯ ಬಿಜೆಪಿ ಸರ್ಕಾರ ಸುವರ್ಣ ಕಾರಿಡಾರ್ ಯೋಜನೆಯಡಿ ಭೂ ಬ್ಯಾಂಕ್ ಅನ್ನು ಸ್ಥಾಪನೆ ಮಾಡಿಕೊಂಡು ಬೇಕಾಬಿಟ್ಟಿ ರೈತರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿದೆ ಎಂದು ಟೀಕಿಸಿದರು.