ಮಾ.30ರೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸೋಮವಾರ ವಜಾಗೊಳಿಸಿದ್ದು, ಚುನಾವಣೆ ಕುರಿತಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶ ಪಾಲಿಸುವಂತೆ ಸೂಚನೆ ನೀಡಿದೆ. ಇದರಿಂದ ಸರ್ಕಾರ ಮತ್ತೊಮ್ಮೆ ಮುಖಭಂಗಕ್ಕೆ ಈಡಾಗಿದೆ.
ಬಿಬಿಎಂಪಿ ಚುನಾವಣೆ ವಿವಾದ ಕುರಿತಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಪೀಠ, ಚುನಾವಣೆ ನಡೆಸಲು ಕಾಲಾವಕಾಶ ಬೇಕಿದ್ರೆ ರಾಜ್ಯ ಹೈಕೋರ್ಟ್ ಮೊರೆ ಹೋಗುವಂತೆ ಸೂಚನೆ ನೀಡಿದೆ. ಅಲ್ಲದೇ ಚುನಾವಣೆ ಕುರಿತಂತೆ ಹೈಕೋರ್ಟ್ ನೀಡಿರುವ ಆದೇಶ ಪಾಲಿಸುವಂತೆ ಆದೇಶಿಸಿದೆ.
ಬಿಬಿಎಂಪಿ ಚುನಾವಣೆಯನ್ನು ಮುಂದೂಡಲೇಬೇಕೆಂದು ಪಣತೊಟ್ಟಿರುವ ರಾಜ್ಯ ಸರ್ಕಾರ ಸಾಕಷ್ಟು ಕಾನೂನು ಕಸರತ್ತು ನಡೆಸಿತ್ತು. ಆದರೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಸರ್ಕಾರದ ನಿಲುವನ್ನು ತರಾಟೆಗೆ ತೆಗೆದುಕೊಂಡು ಮಾರ್ಚ್ 30ರೊಳಗೆ ಚುನಾವಣೆ ನಡೆಸುವಂತೆ ಅಂತಿಮ ತೀರ್ಪು ನೀಡಿತ್ತು.
ಆದರೆ ಇದರಿಂದ ಸಮಾಧಾನಗೊಳ್ಳದ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾಲವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸಮಯಾವಕಾಶ ನೀಡಬೇಕೆಂದು ಕೋರಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.