ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಕಾರ್ಲ್‌ಟನ್ ಟವರ್‌ನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಗಾಯಗೊಂಡ 59ಮಂದಿಯಲ್ಲಿ 37ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿರುವ 22ಮಂದಿಯಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಉಳಿದ 19ಮಂದಿ ಸಹ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಕೆಲವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.
ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲ್ ಆಸ್ಪತ್ರೆಗೆ ಸಂಬಂಧಿಕರು ಧಾವಿಸಿದ್ದು ಆರೋಗ್ಯ ವಿಚಾರಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳ ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ.
ಏತನ್ಮಧ್ಯೆ ಅಗ್ನಿ ಅನಾಹುತದ ಹೊಗೆಯಿಂದ ಉಸಿರು ಗಟ್ಟಿ ಹಾಗೂ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಮಂದಿಯ ಮೃತದೇಹಗಳನ್ನು ವಿಕ್ಟೋರಿಯಾ, ಅಂಬೇಡ್ಕರ್ ಮತ್ತು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ನೀಡಲಾಗಿದೆ.
ಕ್ರಿಮಿನಲ್ ಕೇಸು:ಅಗ್ನಿ ಅನಾಹುತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರ ವಿರುದ್ಧ ಜೆಬಿ ನಗರ ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಾಗಿದೆ. ಮಾಲೀಕರ ಬಂಧನಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.