ಭಾರತೀಯ ಜನತಾ ಪಕ್ಷ ಹಾಗೂ ಸರ್ಕಾರವನ್ನು ತಾಯಿಯಂತೆ ನೋಡಿಕೊಳ್ಳಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸಲಹೆ ನೀಡಿದ್ದಾರೆ.
ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪಕ್ಷದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ನೋಡಿಕೊಂಡು ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ಪಕ್ಷದ ನೂತನ ಪದಾಧಿಕಾರಿಗಳಿಗೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಪಕ್ಷದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನಗಳನ್ನು ಹತ್ತಿಕ್ಕಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರೀತಿಯಿಂದ ಮುನ್ನಡೆಯಬೇಕಾಗಿದೆ. ನಮ್ಮ ಎಲ್ಲ ಸಮಸ್ಯೆಗಳನ್ನು ಮನೆಯೊಳಗೆ ಬಗೆಹರಿಸಿಕೊಳ್ಳೋಣ ಎಂದು ಹೇಳಿದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಪ್ರತಿಪಕ್ಷದ ಮುಖಂಡರು ಅನಗತ್ಯ ಹೋರಾಟ ನಡೆಸುತ್ತಿದ್ದಾರೆ. ಕೈಗಾರಿಕೆ, ವಿದ್ಯುತ್ ಯೋಜನೆಗಳ ಭೂಸ್ವಾಧೀನಕ್ಕೂ ಅಡ್ಡಿ ಪಡಿಸುತ್ತಿದ್ದಾರೆ. ಇದನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ ಎಂದರು.