ನೈಸ್ ಯೋಜನೆಯಲ್ಲಿ ರೈತರ ಭೂಮಿಯನ್ನು ಸರ್ಕಾರ ವಶಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೋರಾಟ ಮುಂದುವರಿಸಿರುವ ಬೆನ್ನಲ್ಲೇ, ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ಭೂಮಿ ವಶಪಡಿಸಿಕೊಳ್ಳುತ್ತಿರುವ ಸರ್ಕಾರದ ಧೋರಣೆ ವಿರುದ್ಧ ಇದೀಗ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಹೋರಾಟಕ್ಕೆ ಇಳಿದಿದೆ.
ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹಾಗೂ ಮೇಲ್ಮನೆ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಶನಿವಾರ, ಬಿಡಿಎ ಮೂಲಕ ಐದು ಬಡಾವಣೆ ನಿರ್ಮಾಣಕ್ಕೆ ರೈತರ ಫಲವತ್ತಾದ ಜಮೀನನ್ನು ವಶಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಗೊಲ್ಲರ ಹಟ್ಟಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.
ಗೊಲ್ಲರ ಹಟ್ಟಿಯ ಅಂಜನಾ ನಗರದಲ್ಲಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇಶಪಾಂಡೆ, ಕೆಂಪೇಗೌಡ, ಡಾ.ಶಿವರಾಮ ಕಾರಂತ ಸೇರಿದಂತೆ ಐದು ಬಡಾವಣೆ ನಿರ್ಮಾಣಕ್ಕೆ ಸರ್ಕಾರ ಬಿಡಿಎ ಮೂಲಕ ರೈತರ ಲಕ್ಷಾಂತರ ಎಕರೆ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ ಎಂದು ಆರೋಪಿಸಿದರು.
ಆದರೆ ಯಾವುದೇ ಕಾರಣಕ್ಕೂ ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಬಿಡುವುದಿಲ್ಲ ಎಂದು ಎಚ್ಚರಿಸಿರುವ ಅವರು, ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು.