ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ಲೇಖನ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಮಂಗಳವಾರ ಶಿವಮೊಗ್ಗ ಮತ್ತು ಹಾಸನಗಳಲ್ಲಿ ನಡೆಸಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಬುಧವಾರವೂ ಕೂಡ ಕರ್ಫ್ಯೂವನ್ನು ಮುಂದುವರಿಸಲಾಗಿದ್ದು, ಪರಿಸ್ಥಿತಿ ಶಾಂತವಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ನಡೆಸಿದ ಗೋಲಿಬಾರ್‌ಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಬುಧವಾರವೂ ಕೂಡ ಕರ್ಫ್ಯೂ ಮುಂದುವರಿದಿದ್ದು, ಪರಿಸ್ಥಿತಿ ಶಾಂತವಾಗಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಮುರುಗನ್ ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮದ ಅಂಗವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಕರ್ಫ್ಯೂ ಹಾಕು ಕಂಡಲ್ಲಿ ಗುಂಡಿಕ್ಕುವ ಆದೇಶ ಜಾರಿಯಲ್ಲಿರುವ ಕಾರಣ ಯಾರೂ ಮನೆ ಬಿಟ್ಟು ಹೊರ ಬಾರದಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಹಾಸನದಲ್ಲೂ ಪರಿಸ್ಥಿತಿ ಶಾಂತ: ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಲೇಖನದ ವಿವಾದದ ಕಿಡಿ ಹಾಸನದಲ್ಲಿಯೂ ಸಾಕಷ್ಟು ಗಲಭೆಗೆ ಕಾರಣವಾಗಿದ್ದು,ಅಂಗಡಿ-ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ನಗರದಲ್ಲಿ ಮತ್ತೆ ಶಾಂತಿ ಸುವ್ಯವಸ್ಥೆ ಕದಡದಂತೆ ನಿಷೇಧಾಜ್ಞೆಯನ್ನು ಇಂದೂ ಕೂಡ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಪ್ರಥಮ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 10ಕ್ಕೆ ಮುಂದೂಡಲಾಗಿದೆ. ಬಸ್ ಸಂಚಾರ, ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದೆ.
47ಮಂದಿ ವಶಕ್ಕೆ: ಘಟನೆಗೆ ಸಂಬಂಧಿಸಿದಂತೆ 47ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.