ಹಂಪಿ ಕನ್ನಡ ವಿಶ್ವವಿದ್ಯಾಲಯದ 80ಎಕರೆ ಜಮೀನನ್ನು ವಿಜಯನಗರ ಪುನಶ್ಚೇತನ ಟ್ರಸ್ಟ್‌ಗೆ ಹಸ್ತಾಂತರ ಮಾಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು, ಈ ತೀರ್ಮಾನವನ್ನು ಕೂಡಲೇ ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದಾರೆ.
ಹಂಪಿ ವಿವಿಯ ಭೂಮಿಯನ್ನು ಪರಭಾರೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಯ ಉಪನ್ಯಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಬಗ್ಗೆ ರಾಜ್ಯಪಾಲರಿಗೆ ಪತ್ರವನ್ನು ಕೂಡ ಬರೆದಿದ್ದರು.
ಆ ನಿಟ್ಟಿನಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಮೂಲಕ, ಜಮೀನು ಪರಭಾರೆ ನಿರ್ಧಾರವನ್ನು ವಾಪಸು ಪಡೆಯುವಂತೆ ಸೂಚಿಸಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಹಂಪಿ ವಿವಿಯ ಭೂಮಿ ಪರಭಾರೆ ಮಾಡುವ ಮೂಲಕ ರಾಜ್ಯ ಸರ್ಕಾರ ಸಂಘಪರಿವಾರದ ಅಜೆಂಡಾವನ್ನು ಅನುಷ್ಠಾನಗೊಳಿಸಲು ಹೊರಟಿದೆ ಎಂಬ ವ್ಯಾಪಕ ಟೀಕೆ ಕೇಳಿ ಬಂದಿತ್ತು. ಆದರೆ ಆ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ನಿರಾಕರಿಸಿ, ಭೂಮಿ ನೀಡುವ ವಿಚಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.