ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ವಿತರಿಸುತ್ತಿರುವ ಕೃಷಿ ಸಾಲದ ಬಡ್ಡಿದರವನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ, ಶೇ.3ರ ಬಡ್ಡಿದರಲ್ಲಿಯೇ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಸುನೀಲ್ ವಿ.ಹೆಗ್ಡೆ ಅವರ ಪರವಾಗಿ ಎಚ್.ಡಿ.ರೇವಣ್ಣ ಅವರು ಕೇಳಿದ ಪ್ರಶ್ನೆಗೆ ಸಹಕಾರಿ ಸಚಿವ ಲಕ್ಷ್ಮಣ್ ಸವದಿ ಉತ್ತರಿಸುತ್ತಿದ್ದಾಗ ಮಧ್ಯ ಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು ಈ ಹಿಂದೆ ರೈತರಿಗೆ ಸಾಲ ಮನ್ನಾ ಮಾಡುವಾಗ ಅಷ್ಟೊಂದು ಹಣ ಎಲ್ಲಿಂದ ತರುತ್ತೀರಿ ಎಂದು ನೀವು ಹಾಗೂ ನಿಮ್ಮ ತಂದೆ(ದೇವೇಗೌಡ) ಕೇಳಿದ್ದೀರಿ. ಆದರೂ ನಾವು ಯಶಸ್ವಿಯಾಗಿ ಜಾರಿ ಮಾಡಿದೆವು. ಈಗಲೂ ಅಷ್ಟೇ ರೈತರಿಗೆ ಶೇ.3ರ ಬಡ್ಡಿದರದಲ್ಲಿ ಸಾಲ ವಿತರಿಸುವ ಕಾರ್ಯಕ್ರಮ ಮುಂದುವರಿಯಲಿದೆ ಎಂದರು.
ಕೇಂದ್ರ ಸರ್ಕಾರ ರೈತರ ಬೆಳೆ ಸಾಲದ ಬಡ್ಡಿದರವನ್ನು ಕಡಿಮೆ ಮಾಡಿರುವುದರಿಂದ ರಾಜ್ಯದಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಸವದಿ ಈ ಸಂದರ್ಭದಲ್ಲಿ ಹೇಳಿದರು.
ರಾಜ್ಯದ ರೈತರಿಗೆ ಸಾಲ ಮನ್ನಾ ಮಾಡಿದ 1760ಕೋಟಿ ರೂಪಾಯಿ ಕೇಂದ್ರ ಸರ್ಕಾರ ಮರು ಪಾವತಿ ಮಾಡುವಂತೆ ಮನವಿ ಮಾಡಲಾಗಿದೆ. ಆ ಹಣ ಬಂದರೆ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅವರು ತಿಳಿಸಿದರು.