ಬಿಬಿಎಂಪಿ ಚುನಾವಣಾ ಅಖಾಡಕ್ಕೆ ಬಿಜೆಪಿ ಶನಿವಾರ 198 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಪುತ್ರ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.
ಹಲವು ಬಂಡಾಯ ಅಭ್ಯರ್ಥಿಗಳ ಪೈಪೋಟಿಯ ನಡುವೆಯೇ ಕಟ್ಟಾ ಸುಬ್ರಮಣ್ಯ ಪುತ್ರ ಜಗದೀಶ್ ಕಟ್ಟಾ ವಸಂತ ನಗರ ವಾರ್ಡ್‌ನಿಂದ ಅಖಾಡಕ್ಕಿಳಿದ್ದರೆ, ಜೆ.ಪಿ.ನಗರ್ ವಾರ್ಡ್‌ನಿಂದ ನಂಜುಡಪ್ಪ ಸೇರಿದಂತೆ ಹಲವು ಪ್ರಮುಖರನ್ನು ಬಿಜೆಪಿ ಕಣಕ್ಕಿಳಿಸಿದೆ.
ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವುದನ್ನೇ ಮುಖ್ಯ ಗುರಿಯಾಗಿರಿಸಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಕರಸತ್ತು: ಜೆಡಿಎಸ್ ಹಾಗೂ ಬಿಜೆಪಿ ಬಿಬಿಎಂಪಿ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ಇರುವ ಹಿನ್ನೆಲೆಯಲ್ಲಿ ಶನಿವಾರ ಬನ್ನೇರುಘಟ್ಟದ ರೆಸಾರ್ಟ್‌ವೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ, ಪ್ರಣಾಳಿಕೆಯನ್ನು ಅಂತಿಮಗೊಳಿಸಿ ಎರಡು ದಿನಗಳಲ್ಲಿಯೇ ಬಿಡುಗಡೆ ಮಾಡುವುದಾಗಿ ದೇಶಪಾಂಡೆ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.