ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ಕಾರ್ಯಗಳಿಗೆ 50 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಹಾಗೂ ಮೂಲ ಸೌಕರ್ಯ ಅಭಿವೃದ್ದಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಪಿಲಿಕುಳ ನಿಸರ್ಗಧಾಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಪ್ರವಾಸೋದ್ಯಮ ಯೋಜನೆಗಳಿಗೆ 257 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಅದರಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 50 ಕೋಟಿ ರೂ.ಗಳ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ಅಲ್ಲದೆ, ಕಳೆದ ಬಾರಿಯೇ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿ ಕಾರ್ಯಗಳಿಗೆ 11 ಕೋಟಿ ರೂ. ಖರ್ಚು ಮಾಡಲಾಗಿದೆ. ತೂಗು ಸೇತುವೆ ನಿರ್ಮಿಸುವ ಯೋಜನೆಗೆ ಈಗಾಗಲೇ 5 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಇದೇ ವೇಳೆ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಹುದ್ದೆ ನೀಡುವ ನಿರ್ಧಾರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ನಿರ್ಧಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು, ಪಕ್ಷದ ನಿರ್ಧಾರಕ್ಕೆ ತಾವು ಸದಾ ಬದ್ಧರಾಗಿರುವುದಾಗಿ ಹೇಳಿದ್ದಾರೆ.