ದೇಶದ ದಕ್ಷಿಣ ಕರಾವಳಿಯ ಸಮುದ್ರ ಪ್ರದೇಶದ ಮೂಲಕ ಉಗ್ರರು ದೇಶದೊಳಕ್ಕೆ ನುಸುಳುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆಯ ವರದಿಯ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಕೇರಳದ ಕರಾವಳಿ ಪ್ರದೇಶದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಕಾಸರಗೋಡು ಅಥವಾ ಕೇರಳದ ಕನ್ನೂರು ಜಿಲ್ಲೆಯ ಸಮುದ್ರ ಪ್ರದೇಶದ ಮೂಲಕ ಉಗ್ರರು ದೇಶದೊಳಕ್ಕೆ ನುಸುಳುವ ಸಾಧ್ಯತೆ ದಟ್ಟವಾಗಿದೆ ಕೇಂದ್ರ ಗುಪ್ತಚರ ಇಲಾಖೆ ಕೇರಳ ಮತ್ತು ಕರ್ನಾಟಕ ಸರ್ಕಾರಕ್ಕೆ ಮುನ್ನೆಚ್ಚರಿಕೆಯನ್ನು ನೀಡಿ, ಕರಾವಳಿ ಪ್ರದೇಶದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.
ಅಲ್ಲದೇ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿನ ಕೈಗಾರಿಕಾ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸ್ ಇಲಾಖೆ ಸೂಚಿಸಿದೆ. ಅದಕ್ಕಾಗಿ ಕರಾವಳಿ ಪ್ರದೇಶದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿರುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದೆ.
ಆ ಹಿನ್ನೆಲೆಯಲ್ಲಿ ಕರಾವಳಿ ಭದ್ರತಾ ಪಡೆ, ಪೊಲೀಸ್, ಬಂದರು ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಕೋಸ್ಟ್ ಗಾರ್ಡ್ಸ್ ತೀವ್ರ ಕಟ್ಟೆಚ್ಚರ ವಹಿಸಿವೆ ಎಂದು ಮೂಲಗಳು ತಿಳಿಸಿವೆ. ಗುಪ್ತಚರ ಇಲಾಖೆಯ ಮುನ್ನೆಚ್ಚರಿಕೆಯ ಪರಿಣಾಮ ಕೇರಳ ಪೊಲೀಸ್ ಮಹಾನಿರ್ದೇಶಕರು ಈಗಾಗಲೇ ಇಲಾಖೆಗೆ ಬಿಗಿ ಭದ್ರತೆ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.