ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ನಿವಾರಣೆ ಹಾಗೂ ಉತ್ತರ ಕರ್ನಾಟಕದ ಭಾಗದ ನೆರೆ ಸಂತ್ರಸ್ತರಿಗೆ ಸೂಕ್ತ ನೆರವು ಕಲ್ಪಿಸಿಕೊಡಲು ಹಣ ಇಲ್ಲ ಎಂದು ಕೈಚೆಲ್ಲುವ ಆಡಳಿತಾರೂಢ ಬಿಜೆಪಿ ಸರ್ಕಾರ ಚುನಾವಣೆಗಳಲ್ಲಿ ಕೋಟಿಗಟ್ಟಲೇ ಹಣ ವ್ಯಯಿಸಿ ಗೆಲುವು ಸಾಧಿಸುತ್ತದೆ. ಆ ನಿಟ್ಟಿನಲ್ಲಿ ಬಿಜೆಪಿ ಹಣ ಬಲದ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಶುಕ್ರವಾರ ನಾಗಮಂಗಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರೆಡ್ಡಿ ಸಹೋದರರಿಗೆ ಅಕ್ರಮ ಗಣಿಗಾರಿಕೆಯಿಂದ ತಿಂಗಳಿಗೆ 400 ಕೋಟಿ ರೂ. ಆದಾಯವಿದೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಪಾಲಿದೆ. ಈ ಕಾರಣದಿಂದಾಗಿಯೇ ಅವರು ರೆಡ್ಡಿಗಳ ಅಕ್ರಮದ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ ಎಂದರು.
ಅಲ್ಲದೇ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆಯನ್ನೇ ಹರಿಸಿ, ಗೆಲುವು ಸಾಧಿಸಿದೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿ ವಾರ್ಡ್‌ನಲ್ಲಿ ಏಳೆಂಟು ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ದೂರಿದರು.
ಈಗ ಗ್ರಾಮ ಪಂಚಾಯ್ತಿ ಚುನಾವಣೆಗೂ ಅದೇ ಹಣ ಬಲ ಬಳಕೆ ಮಾಡುತ್ತಾರೆ. ಹಣಬಲದ ರಾಜಕಾರಣದಿಂದ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ಕಿಡಿಕಾರಿದರು.