ಬಿಬಿಎಂಪಿ ಚುನಾವಣೆಯಲ್ಲಿ ಹಣಬಲದಿಂದ ಬಿಜೆಪಿ ಜಯ ಗಳಿಸಿದೆಯೇ ವಿನಃ, ಅದಕ್ಕೆ ಜನ ಬೆಂಬಲ ದೊರೆತಿಲ್ಲ. ಬಿಜೆಪಿ ದುರಾಡಳಿತದಿಂದ ಜನರು ಬೇಸತ್ತಿದ್ದು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾರತ್‌ಹಳ್ಳಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಕ್ಷೇತ್ರದ ವಿವಿಧ ವಾರ್ಡ್‌ಗಳಿಂದ ಪಾಲಿಕೆಗೆ ಆಯ್ಕೆಯಾದ ಸದಸ್ಯರನ್ನು ಅಭಿನಂದಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಅನಾವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ದೂರಿದರು. ಜನತೆಗೆ ಸದಾ ಸುಳ್ಳು ಹೇಳಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಯವೈಖರಿ ಜನರಿಗೆ ಬೇಸರ ಹುಟ್ಟಿಸಿದೆ ಎಂದರು.
ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತಷ್ಟು ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸಿ ಪಕ್ಷವನ್ನು ಬಲಪಡಿಸಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು.