ಅಕ್ರಮ ಗಣಿಗಾರಿಕೆ ಕುರಿತಂತೆ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಗೆ ಸರ್ಕಾರ ಯಾವುದೇ ರೀತಿಯ ಕ್ರಮ ಜರುಗಿಸದಿರುವ ಬಗ್ಗೆ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಕುರಿತು ವರದಿ ಸಲ್ಲಿಸಿ ಸೆಪ್ಟೆಂಬರ್‌ಗೆ 2 ವರ್ಷವಾಗುತ್ತಿದೆ. ಆದರೂ ಇದುವರೆಗೆ ಸರ್ಕಾರ ಕೇವಲ ಆರು ಪ್ರಶ್ನೆಗೆ ಉತ್ತರ ನೀಡಿದೆ ಎಂದು ವಿಷಾದಿಸಿದರು.
ಬಳ್ಳಾರಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ವರದಿಯಲ್ಲಿ ತಿಳಿಸಲಾಗಿತ್ತು. ಅಲ್ಲದೆ, ವರದಿಗೆ ಅನುಗುಣವಾಗಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವ ಮಾತುಗಳನ್ನು ಹೇಳುತ್ತಲೇ ಬಂದಿದೆ ಎಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರವಾಧಿಯಲ್ಲಿ ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ ಅಧಿಕಾರಿಗಳ ಕೈವಾಡದಿಂದ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ ಎಂದು ದೂರಿದರು.