ರಾಜ್ಯದಲ್ಲಿ ಉಂಟಾಗಿರುವ ತೀವ್ರ ವಿದ್ಯುತ್ ಅಭಾವಕ್ಕೆ ಸಂಬಂಧಿಸಿದಂತೆ ಇದರ ನಿವಾರಣೆಗೆ ಪ್ರತಿದಿನ 700 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಸಕ್ಕರೆ ಕಾರ್ಖಾನೆಗಳಿಂದ 200 ಮೆಗಾವ್ಯಾಟ್, ಜಿಂದಾಲ್‌ನಿಂದ 500 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದರ ಜೊತೆಗೆ ರಾಜ್ಯದ ಮೂರು ಕಡೆಗಳಲ್ಲಿ ತಲಾ 700 ಮೆಗಾವ್ಯಾಟ್ ಸಾಮರ್ಥ್ಯದ 3 ಅನಿಲ ಆಧಾರಿತ ವಿದ್ಯುತ್ ಘಟಕ ಸ್ಥಾಪಿಸುವ ಪ್ರಸ್ತಾವನೆಗೆ ಸಂಪುಟ ಸಭೆ ಹಸಿರು ನಿಶಾನೆ ತೋರಿಸಿದೆ ಎಂದು ಅವರು ತಿಳಿಸಿದ್ದಾರೆ.
ಈ ನಡುವೆ ರಾಜ್ಯದಲ್ಲಿ ನಕ್ಸಲ್ ನಿಗ್ರಹಕ್ಕೂ ಮುಂದಾಗಿರುವ ಸರ್ಕಾರ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಕ್ಸಲ್ ನಿಗ್ರಹ ದಳದ ಸಿಬ್ಬಂದಿಗೆ ವೇತನ ಮತ್ತಿತರ ಸೌಲಭ್ಯ ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ವಿವರಿಸಿದ್ದಾರೆ.