ಕುಡಿಯುವ ನೀರಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ಧರಣಿ ನಡೆಸುವ ಮೂಲಕ ಪ್ರತಿಪಕ್ಷಗಳು ವಿನಕಾರಣ ಕಲಾಪಗಳಿಗೆ ಅಡ್ಡಿ ಪಡಿಸಿದ್ದಾರೆ ಎಂದು ಮೇಯರ್ ಎಸ್.ಕೆ. ನಟರಾಜ್ ಆರೋಪಿಸಿದ್ದಾರೆ.
ಶುಕ್ರವಾರ ನಡೆದ ಪಾಲಿಕೆಯ ಚೊಚ್ಚಲ ಸಭೆಯನ್ನು ಅನಿರ್ದಿಷ್ಟ ಕಾಲದವರೆಗೆ ಮುಂದೂಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ರಾಜಕೀಯ ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ದೂರಿದ್ದಾರೆ.
ನಗರದಲ್ಲಿ ಮುಂದಿನ ಮೂರು ದಿನದೊಳಗಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಮೇಯರ್ ಭರವಸೆ ನೀಡಿದ್ದಾರೆ. ಅಲ್ಲದೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 15 ಬೋರ್‌ವೆಲ್ ಹಾಗೂ ನಾಲ್ಕು ನೀರಿನ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಹೇಗಿದೆ ಎಂಬುದನ್ನು ಅಧ್ಯಯನ ಮಾಡಿ ಸದ್ಯದಲ್ಲೇ ಎಲ್ಲಾ ಸದಸ್ಯರನ್ನು ತೊರೆಕಾಡನಹಳ್ಳಿ ಜಲಾಶಯಕ್ಕೆ ಕರೆದೊಯ್ದು ನಗರದಲ್ಲಿ ನೀರಿನ ಸಮಸ್ಯೆ ಉದ್ಭವವಾಗದಂತೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.