ಗ್ರಾಮೀಣ ಭಾಗದ ಇಂಜಿನಿಯರಿಂಗ್ ಕಾಲೇಜುಗಳಲ್ಲೂ ಕ್ಯಾಂಪಸ್ ಸಂದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಐಟಿ ಸಂಸ್ಥೆಗಳೊಂದಿಗೆ ಮಾತುಕತೆ ಆಡಲಾಗುವುದು ಎಂದು ಸಹ ಅವರು ಹೇಳಿದ್ದಾರೆ.
ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ವಿಶೇಷವಾಗಿ ಹಳ್ಳಿಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡಲಾಗುತ್ತಿದೆ. ಈ ಬಾರಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಪಗ್ರಹ ತಂತ್ರಜ್ಞಾನದ ಮೂಲಕ ಸಿಇಟಿ ತರಬೇತಿ ಕೊಡಿಸಲಾಗಿದೆ. ಹೀಗಾಗಿ ಉತ್ತಮ ಫಲಿತಾಂಶ ಬರುವ ವಿಶ್ವಾಸವಿದೆ ಎಂದರು.
ಸಿಇಟಿ ಪರೀಕ್ಷೆ ಪೂರ್ಣಗೊಂಡಿದ್ದು, ಜೂನ್ 2 ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ. ಈ ವರ್ಷದ ಸಿಇಟಿ ಪ್ರಕ್ರಿಯೆ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗಿತ್ತು ಎಂದು ತಿಳಿಸಿದರು.
ಅನುಮತಿಯಿಲ್ಲದ ಕಾಲೇಜುಗಳನ್ನು ಬಂದ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇಂತಹ ಕಾಲೇಜುಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ಬರುತ್ತದೆ. ಹೀಗಾಗಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.