ರಾಜ್ಯದ 13 ಜಿಲ್ಲೆಗಳ 236 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಟ್ಯಾಂಕರ್‌ಗಳ ಮೂಲಕ ನೀರನ್ನು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಅವರು ಗುರುವಾರ ತಿಳಿಸಿದ್ದಾರೆ.
ಈ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಪ್ರತಿನಿತ್ಯ 687ಟ್ಯಾಂಕರ್‌ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ,ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಬಿಜಾಪುರ, ರಾಯಚೂರು, ಮಂಗಳೂರು, ಮೈಸೂರು, ಗುಲ್ಬರ್ಗಾ, ಉತ್ತರ ಕನ್ನಡ, ಕೊಪ್ಪಳ ಮತ್ತು ಮಂಡ್ಯ ಜಿಲ್ಲೆಗಳಿಗೆ ಸೇರಿದ 236 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದರು.
ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ಕುಡಿಯುವ ನೀರಿನ ಯೋಜನೆಗಾಗಿ ಶಾಸಕರ ನೇತೃತ್ವದ ಕಾರ್ಯಪಡೆಗಳಿಗೆ 19ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಅದಾದ ನಂತರ ಏ.12ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ತಲಾ 1ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವುದಾಗಿ ಹೇಳಿದರು.