ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಲಪ್ಪ ಅವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂಬ ಪ್ರತಿಪಕ್ಷಗಳ ಕೂಗಿಗೆ ತಿರುಗೇಟು ನೀಡಿರುವ ಕಾನೂನು ವ್ಯವಹಾರಗಳ ಸಚಿವ ಎಸ್.ಸುರೇಶ್ ಕುಮಾರ್, ಹಾಲಪ್ಪ ಖುದ್ದು ಸಿಐಡಿ ಪೊಲೀಸರ ಮುಂದೆ ಹಾಜರಾಗುವ ಮೂಲಕ ವಿಪಕ್ಷಗಳ ಅನುಮಾನ ದೂರ ಮಾಡಿದ್ದಾರೆ ಎಂದರು.
ನಗರದಲ್ಲಿ ಭಾನುವಾರ ನಡೆದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಪ್ಪ ಅವರನ್ನು ಮುಖ್ಯಮಂತ್ರಿಗಳು ರಕ್ಷಿಸುತ್ತಿದ್ದಾರೆ ಎಂದು ವಿಪಕ್ಷಗಳು ದೂರುತ್ತಿದ್ದವು. ಆದರೆ ಇದೀಗ ಹಾಲಪ್ಪ ಅವರು ಖುದ್ದು ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ ಎಂದರು. ಅಲ್ಲದೇ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಪ್ಪ ಅವರನ್ನು ವಿಚಾರಣೆ ನಡೆಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ತನಿಖೆ ನಿಷ್ಪಕ್ಷಪಾತವಾಗಿಯೇ ನಡೆಯುತ್ತದೆ. ಇದರಲ್ಲಿ ಯಾರೇ ತಪ್ಪಿತಸ್ಥರಾಗಿರಲಿ ಅವರಿಗೆ ಶಿಕ್ಷೆ ಖಚಿತ ಎಂದು ಸ್ಪಷ್ಟಪಡಿಸಿದರು.