ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಮತ್ತು ಸುತ್ತಮುತ್ತಲು ನಕಲಿ ಮದ್ಯ ಸೇವಿಸಿ ಕಳೆದ ಮೂರು ದಿನಗಳಿಂದ 11 ಮಂದಿ ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಕೆ.ಎಂ.ಶ್ರೀನಿವಾಸಪ್ಪ, ಅಬಕಾರಿ ಇಲಾಖೆಯ ಇನ್ಸ್‌ಪೆಕ್ಟರ್ ಮೈಲಾರಪ್ಪ, ಸಬ್ ಇನ್ಸ್‌ಪೆಕ್ಟರ್ ಪಿ.ಎಂ.ಶ್ರೀರಾಮ್ ಅವರುಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನ್ವರ್ ಪಾಷಾ ಅವರು ತಿಳಿಸಿದ್ದಾರೆ.
ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇಲ್ನೋಟಕ್ಕೆ ಮೂವರು ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಿಬ್ಬೂರಹಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನು 24ಗಂಟೆಯೊಳಗೆ ನಕಲಿ ಮದ್ಯ ಸೇವನೆ ಮಾಡಿ 11 ಮಂದಿ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವುದಾಗಿ ತಿಳಿಸಿದರು.
ದುರ್ಘಟನೆಯಲ್ಲಿ ಸಾವನ್ನಪ್ಪಿದ ಗಂಗಮ್ಮ ಎಂಬುವರ ಸಾವಿನ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ನೀಡಿದ ದೂರಿನ ಅನ್ವಯ ಏಳು ಮಂದಿ ವಿರುದ್ಧ ಕ್ರಮ ಜರುಗಿಸಲಾಗುವುದು ಹಾಗೂ ತಮ್ಮಣ್ಣ ಎಂಬುವರು ಮೃತಪಟ್ಟಿದ್ದು, ಅವರ ಸಂಬಂಧಿಗಳು ನೀಡಿದ ದೂರಿನ ಆಧಾರದಲ್ಲಿ 6 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದ್ದಾರೆ.