ಗಣಿ ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲು ಅನರ್ಹರಾಗಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡಲೇ ಈ ಮೂವರು ಅನರ್ಹ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಗಣಿ ಸಚಿವರೇನು ಉತ್ತಮ ಚಾರಿತ್ರ್ಯ ಹೊಂದಿದವರಲ್ಲ, ಅವರ ಮೇಲೆ ಈ ಹಿಂದೆ ಬಳ್ಳಾರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಮೊಕದ್ದಮೆಗಳು ದಾಖಲಾಗಿದ್ದವು. ಅವುಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಹಿಂದಕ್ಕೆ ಪಡೆದಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ ಎಂದು ಆರೋಪಿಸಿದರು.
ಸಚಿವರು ನಡೆಸುತ್ತಿರುವ ಅಕ್ರಮ ಗಣಿಗಾರಿಕೆ ಸೇರಿದಂತೆ ಇತರೆ ದೂರುಗಳನ್ನು ವಿಧಾನಪರಿಷತ್ ಸದಸ್ಯ ಕೊಂಡಯ್ಯ ಅವರು ರಾಜ್ಯಪಾಲರಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದಾರೆ. ಇದರಲ್ಲಿ ಅವರದು ಯಾವುದೇ ತಪ್ಪಿಲ್ಲ ಎಂದು ಸಮಜಾಯಿಷಿ ನೀಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ವೇಳೆ ಜನಾರ್ದನ ರೆಡ್ಡಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸುಮಾರು 150ಕೋಟಿ ರೂಪಾಯಿ ಲಂಚ ಪಡೆದ ಆರೋಪ ಮಾಡಿದಾಗ ಅಂದಿನ ರಾಜ್ಯಪಾಲರು ಕುಮಾರಸ್ವಾಮಿಗೆ ನೋಟಿಸ್ ನೀಡಿ ಅವರನ್ನು ಕರೆಯಿಸಿಕೊಂಡು ವಿಚಾರಣೆ ನಡೆಸಿದ್ದರು. ಇದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದರು, ಹಾಗೆಯೇ ಜನಾರ್ದನ ರೆಡ್ಡಿ ನೋಟಿಸ್‌ಗೆ ಗೌರವ ನೀಡಬೇಕು. ಅದನ್ನು ಬಿಟ್ಟು ರಾಜ್ಯಪಾಲರ ಅಧಿಕಾರ ವ್ಯಾಪ್ತಿಯನ್ನೇ ಪ್ರಶ್ನಿಸುವುದು ಉದ್ದಟತನ ಎಂದರು.