ಗೊಬ್ಬರ ವಿತರಣೆ ವೇಳೆ ಹಾವೇರಿಯಲ್ಲಿ ನಡೆದ ಗೋಲಿಬಾರ್ ಘಟನೆಗೆ ಸಂಬಂಧಿಸಿದಂತೆ ಆಯೋಗ ನೀಡಿರುವ ವರದಿ ಸತ್ಯಕ್ಕೆ ದೂರವಾಗಿದೆ ಗಲಭೆಯಲ್ಲಿ ಮಡಿದವರು ರೈತರೇ ಅಲ್ಲ ಎಂಬ ಅಂಶ ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ದೂರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಲಿಬಾರ್ ಪ್ರಕರಣದಲ್ಲಿ ಆಯೋಗ ಈಗಾಗಲೇ ಸರ್ಕಾರಕ್ಕೆ ವರದಿ ಒಪ್ಪಿಸಿದೆ. ಆದರೆ ಗಲಭೆ ರಾಜಕೀಯ ಪ್ರೇರಿತವಾಗಿದ್ದು, ಘಟನೆಯಲ್ಲಿ ಮಡಿದವರು ರೈತರೇ ಅಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಗೋಲಿಬಾರ್ ಘಟನೆ ಕುರಿತು ಆಯೋಗದ ವರದಿ ನ್ಯಾಯಯುತವಾಗಿಲ್ಲ ಎಂದು ಹೇಳಿದರು.
ಅಲ್ಲದೇ ರಾಜ್ಯದಲ್ಲಿ ಬಿತ್ತನೆ ಬೀಜ, ಗೊಬ್ಬರವನ್ನು ಸಕಾಲದಲ್ಲಿ ಕೊಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಡಿಕೆಶಿ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಾತನಾಡಿದ ಅವರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ. 70ರಷ್ಟು ನಮ್ಮವರೇ ಗೆದ್ದಿದ್ದಾರೆ ಎಂದು ಬಿಜೆಪಿ ಹೇಳುತ್ತಿರುವುದು ಸತ್ಯಕ್ಕೆ ದೂರವಾಗಿದೆ. ವಾಸ್ತವವಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳೇ ಗೆದ್ದಿದ್ದಾರೆ ಎಂದು ತಿಳಿಸಿದ್ದಾರೆ.