ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿಯನ್ನು ಮೆಚ್ಚಿಸಲು ಹಾಗೂ ತಮ್ಮ ವಿಪಕ್ಷ ನಾಯಕನ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಸಾಧನೆಯಾದರು ಏನು? ಎಂದು ತರಾಟೆಗೆ ತೆಗೆದುಕೊಂಡರು. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ. ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ತಿಳಿಸುತ್ತೇವೆ ಎಂದು ಸವಾಲು ಹಾಕಿದರು.
ಹಿಂದುಳಿದ ವರ್ಗದವರ ಬಗ್ಗೆ ಸಿದ್ದರಾಮಯ್ಯ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ಅವರಿಗೆ ಹಿಂದುಳಿದವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದರು. ಹಿಂದುಳಿದ ವರ್ಗದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾಕಷ್ಟು ಹಣ ಬಿಡುಗಡೆ ಮಾಡಿ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನು ಸಹಿಸದೆ ಸಿದ್ದರಾಮಯ್ಯ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು. ಇದರಲ್ಲಿ ಪಕ್ಷವಾಗಲಿ ಅಥವಾ ಸರ್ಕಾರವಾಗಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.