ತಾವು ಕೇಂದ್ರ ಮಂತ್ರಿಯಾಗುವ ವಿಷಯ ಕೇವಲ ಮಾಧ್ಯಮ ಸೃಷ್ಟಿಯಾಗಿದ್ದು, ಇಂತಹ ಯಾವುದೇ ಬೆಳವಣಿಗೆ ನಡೆದಿರುವ ಬಗ್ಗೆ ಮಾಹಿತಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಮಾತುಕತೆ ಇನ್ನೂ ಪೂರ್ಣವಾಗಿಲ್ಲ. ದೆಹಲಿ ಮತ್ತು ಬೆಂಗಳೂರಿನಲ್ಲಿ ಇನ್ನೊಂದು ಸುತ್ತಿನ ಮಾತುಕತೆ ಬಳಿಕ ಅಂತಿಮ ನಿರ್ಧಾರ ಹೊರಬೀಳಬಹುದು ಎಂದರು.
ಆದರೆ ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ತಾವು ಬಂಡೇಳಲಿದ್ದು, ಸರಕಾರದ ವೈಫಲ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಆ. 15ರಿಂದ ರಾಜ್ಯಾದ್ಯಂತ ಪಾದಯಾತ್ರೆ ಹಮ್ಮಿಕೊಳ್ಳಲಿದ್ದೇನೆ ಎಂದರು.
ರಾಜ್ಯದ ಅಧಿಕಾರ ಸೂತ್ರ ಹಿಡಿದಿರುವ ಬಿಜೆಪಿ ಕೇವಲ ಹಣದಿಂದಲೇ ಎಲ್ಲವನ್ನೂ ಸಾಸಬಹುದೆನ್ನುವ ಅಹಂನಿಂದ ವರ್ತಿಸುವ ಮೂಲಕ ಜನರ ಹಿತವನ್ನು ಕಡೆಗಣಿಸುತ್ತಿದೆ ಎಂದು ದೂರಿದರು.
ಬಿಜೆಪಿ ಸರಕಾರದ ಬಂಡವಾಳ ಬಯಲು ಮಾಡಲು ಮತ್ತು ಜನರಲ್ಲಿ ತಿಳಿವಳಿಕೆ ಮೂಡಿಸಲು ಬಸವಕಲ್ಯಾಣದಿಂದ ಪಾದಯಾತ್ರೆ ಆರಂಭಿಸಲಾಗುವುದು ಎಂದ ಅವರು, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಯತ್ನವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದರು.
ಬಿಜೆಪಿ ಸರಕಾರದ ಆಡಳಿತದಲ್ಲಿ ರಾಜ್ಯದ ಜನತೆ ಇನ್ನಿಲ್ಲದ ತೊಂದರೆ ಎದುರಿಸುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಗ್ರಾ.ಪಂ.ಗಳಿಗೆ ಯಾವುದೇ ಅನುದಾನ ನೀಡದೆ ಗ್ರಾಮ ಮಟ್ಟದಲ್ಲಿ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಸಾಧ್ಯವಾಗುವಂತಹ ಸನ್ನಿವೇಶ ನಿರ್ಮಿಸಿದೆ ಎಂದು ಆರೋಪಿಸಿದರು.