ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಆದೇಶ ನೀಡಿದ್ದಲ್ಲಿ ತನಿಖೆಗೆ ಕೇಂದ್ರ ಸರ್ಕಾರ ಸಿದ್ಧ ಎಂದು ತಿಳಿಸಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಅಕ್ರಮ ಅದಿರು ಸಾಗಣೆ, ಗಡಿ ಒತ್ತುವರಿ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನ್ಯಾ.ವಿ.ಜಿ.ಸಭಾಹಿತ್ ಮತ್ತು ನ್ಯಾ.ಎ.ಎಸ್.ಬೋಪಣ್ಣ ಅವರಿದ್ದ ವಿಭಾಗೀಯ ಪೀಠದ ಮುಂದೆ ಕೇಂದ್ರ ಸರ್ಕಾರ ಈ ಸ್ಪಷ್ಟನೆಯನ್ನು ನೀಡಿದೆ.
ಕೋರ್ಟ್ ಆದೇಶಿಸಿದರೆ ಅಕ್ರಮ ಗಣಿಗಾರಿಕೆ ತನಿಖೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಸಿಬಿಐ ಸೇರಿದಂತೆ ಯಾವುದೇ ಏಜನ್ಸಿಯನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ಸಿದ್ದವಿದೆ. ಅಲ್ಲದೇ ಈ ವಿಚಾರದಲ್ಲಿ ರಾಜ್ಯ ಸರ್ಕಾರವೇ ತನಿಖೆ ನಡೆಸುವುದಾದರೂ ಕೇಂದ್ರ ಸರ್ಕಾರ ಪೂರ್ಣ ಸಹಕಾರ ನೀಡುತ್ತದೆ ಎಂದು ಚೌಧರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.