ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಸರಕಾರ ಉರುಳಿಸಲು ಕಾಂಗ್ರೆಸ್ ಷಡ್ಯಂತ್ರ? (Karnataka | H Bhardwaj | BJP | Congress | Yeddyurappa)
Bookmark and Share Feedback Print
 
ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಉರುಳಿಸಲು ಕಾಂಗ್ರೆಸ್ ವ್ಯವಸ್ಥಿತ ಸಂಚು ರೂಪಿಸುತ್ತಿದೆಯೇ ಎಂಬ ಹಲವು ಊಹಾಪೋಹಾಗಳು ಇದೀಗ ರಾಜಕೀಯ ಪಡಸಾಲೆಯಿಂದ ಕೇಳಿ ಬರುತ್ತಿದೆ. ಅದಕ್ಕೆ ಪೂರಕ ಎಂಬಂತೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಅಕ್ರಮ ಗಣಿಗಾರಿಕೆ ಕುರಿತಂತೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಾಗೂ ರಾಜ್ಯರಾಜಕಾರಣದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಇದಕ್ಕೆ ಪುಷ್ಠಿ ನೀಡಿವೆ.

ರಾಜ್ಯಪಾಲ ಭಾರದ್ವಾಜ್ ಅವರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿದ್ದ ಬಿಜೆಪಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದೆ ಎನ್ನಲಾಗಿದೆ. ಅಲ್ಲದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿ ರಾಜೀನಾಮೆ ನೀಡುವಂತೆ ಮಾಡಲು ಹುನ್ನಾರ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಅಷ್ಟೇ ಅಲ್ಲ, ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಕಳೆದ ಎರಡು ಮೂರು ದಿನಗಳಿಂದ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರಾಜಕೀಯ ಚದುರಂಗದಾಟ ಕೂಡ ಈ ಬೆಳವಣಿಗೆಗೆ ಸಾಥ್ ನೀಡಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಸಬೇಕೆಂದು ಒತ್ತಡ ಹೇರಿ ಕಾಂಗ್ರೆಸ್, ಜೆಡಿಎಸ್‌ನ ಸುಮಾರು ನೂರು ಮಂದಿ ಶಾಸಕರು ಎರಡು ದಿನಗಳ ಕಾಲ ವಿಧಾನಸೌಧದಲ್ಲಿ ರಾತ್ರಿಯೂ ಠಿಕಾಣಿ ಹೂಡಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ವಿಪಕ್ಷ ಮುಖಂಡರ ಮನವೊಲಿಸಲು ಯತ್ನಿಸಿದರಾದರೂ ಅದು ಸಫಲವಾಗಿಲ್ಲ.

ಇದೊಂದು ಬಹುದೊಡ್ಡ ಹಗರಣವಾಗಿದ್ದು, ಸಿಬಿಐ ತನಿಖೆಗೆ ವಹಿಸದೆ ಧರಣಿಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸಭೆಯ ವಿಪಕ್ಷ ಮುಖಂಡ ಸಿದ್ದರಾಮಯ್ಯ ಬುಧವಾರವೂ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಬೆಂಗಳೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿರುವುದಾಗಿಯೂ ತಿಳಿಸಿದ್ದಾರೆ.

ರೆಡ್ಡಿ ಸಹೋದರರಾದ ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಕಂದಾಯ ಸಚಿವ ಜಿ.ಕರುಣಾಕರ ರೆಡ್ಡಿ ಮತ್ತು ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಬಳ್ಳಾರಿ ಮತ್ತು ನೆರೆಯ ಆಂಧ್ರಪ್ರದೇಶದ ಗಡಿಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಆರೋಪ ಎದುರಿಸುತ್ತಿದ್ದಾರೆ. ಇವರು ನಡೆಸುತ್ತಿರುವ ಅಕ್ರಮ ಗಣಿಗಾರಿಕೆ ದಂಧೆಯಿಂದ ರಾಜ್ಯದಲ್ಲಿ ಸುಮಾರು 20ಸಾವಿರ ಕೋಟಿ ರೂಪಾಯಿಯಷ್ಟು ಅಕ್ರಮ ಅದಿರು ಸಾಗಾಟದ ಹಗರಣ ನಡೆದಿದೆ ಎಂದು ವಿಪಕ್ಷಗಳು ದೂರಿವೆ.

ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಕೋರಿಕೆಗೆ ಜಗ್ಗದ ಮುಖ್ಯಮಂತ್ರಿ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಸಿಬಿಐ ತನಿಖೆಗೆ ಒಪ್ಪಿಸಲ್ಲ, ಅಕ್ರಮ ಅದಿರು ಸಾಗಾಟ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ಒಪ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಆಡಳಿತಾರೂಢ ಮತ್ತು ವಿಪಕ್ಷಗಳ ನಡುವೆ ಜಂಗೀಕುಸ್ತಿ ಮುಂದುರಿದಿದ್ದು, ಆ ನಿಟ್ಟಿನಲ್ಲಿ ರಾಜ್ಯರಾಜಕಾರಣದಲ್ಲಿನ ರಾಜಕೀಯ ಚದುರಂಗದಾಟ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಸಂಬಂಧಿತ ಮಾಹಿತಿ ಹುಡುಕಿ