ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಹಗರಣವನ್ನು ಯಾವುದೇ ಕಾರಣಕ್ಕೂ ಸಿಬಿಐ ತನಿಖೆಗೆ ಒಪ್ಪಿಸಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಪಕ್ಷಗಳ ಗದ್ದಲದ ನಡುವೆಯೇ ಹೇಳಿಕೆ ನೀಡುತ್ತಿದ್ದಂತೆಯೇ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೋಲಾಹಲವೆಬ್ಬಿಸಿದಾಗ ಸ್ಪೀಕರ್ ಬೋಪಯ್ಯ ಅವರು ಕಲಾಪವನ್ನು ಗುರುವಾರಕ್ಕೆ ಮುಂದೂಡಿದರು. ಇದರಿಂದ ಕೆರಳಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಗೂಂಡಾ ಮುಖ್ಯಮಂತ್ರಿ ಎಂದು ವಾಗ್ದಾಳಿ ನಡೆಸಿದರು.
ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷಗಳು ಅಕ್ರಮ ಗಣಿ ಹಗರಣವನ್ನು ಸಿಬಿಐಗೆ ಒಪ್ಪಿಸುವಂತೆ ಪಟ್ಟು ಹಿಡಿದವು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಗಣಿ ಹಗರಣದ ತನಿಖೆಗೆ ಲೋಕಾಯುಕ್ತರಿಗೆ ಪೂರ್ಣ ಅಧಿಕಾರ ನೀಡಲಾಗಿದೆ. ಆದರೆ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದರು.
ಇದರಿಂದ ಕೆರಳಿದ ಕಾಂಗ್ರೆಸ್, ಜೆಡಿಎಸ್ ಸದಸ್ಯರು ತೀವ್ರ ಕೋಲಾಹಲವೆಬ್ಬಿಸಿದಾಗ, ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಕಲಾಪವನ್ನು ಗುರುವಾರಕ್ಕೆ ಮುಂದೂಡಿರುವುದಾಗಿ ಹೇಳಿದರು.
ಕಲಾಪವನ್ನು ಬುಧವಾರವೂ ಮುಂದೂಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಗೂಂಡಾ ಮುಖ್ಯಮಂತ್ರಿ, ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ಗಣಿ ಹಗರಣದ ಚರ್ಚೆ ನಡೆಸುವ ಆಸಕ್ತಿ ಇಲ್ಲ ಎಂದು ಕಲಾಪ ಮುಂದೂಡಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಣ ಗಣಿ ಹಗರಣದಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ ಸುಮಾರು 20ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಇದು ಈ ಶತಮಾನದ ಬಹುದೊಡ್ಡ ಹಗರಣವನ್ನು ಇಂತಹ ಗಂಭೀರ ವಿಷಯವನ್ನು ಕಲಾಪದಲ್ಲಿ ಚರ್ಚಿಸಲು ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲ ಎಂದರೆ,ಮುಖ್ಯಮಂತ್ರಿಗಳು ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದರು.
'ಮುಖ್ಯಮಂತ್ರಿ ಯಡಿಯೂರಪ್ಪ ಗಣಿ ಹಗರಣವನ್ನು ಸಿಬಿಐಗೆ ಒಪ್ಪಿಸೋಲ್ಲ, ಯಾಕೆಂದರೆ ಅವರು ರೆಡ್ಡಿ ಬ್ರದರ್ಸ್‌ಗೆ ಹೆದರಿ ಶರಣಾಗಿದ್ದಾರೆ. ಹಾಗಾಗಿ ರಾಜ್ಯದ ಜನರಿಗೆ ಮೋಸ ಮಾಡಿ ಭ್ರಷ್ಟರನ್ನು ರಕ್ಷಿಸಲು ಮುಂದಾಗಿದ್ದಾರೆ' ಎಂದು ಆಪಾದಿಸಿದರು. ಮುಖ್ಯಮಂತ್ರಿಗಳಿಗೆ ಅವರ ಗದ್ದುಗೆ ಉಳಿಸಿಕೊಳ್ಳುವುದು ಮುಖ್ಯವಾಗಿದೆ. ಅಲ್ಲದೇ, ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಗಳು ಕೂಡ ಶಾಮೀಲಾಗಿದ್ದಾರೆ ಎಂಬುದು ನನ್ನ ಊಹೆ ಬಲವಾಗುತ್ತಿದೆ ಎಂದರು.
ಕಲಾಪಕ್ಕೆ ಸಹಕರಿಸಿ ಇಲ್ಲದಿದ್ರೆ ಕ್ರಮ-ಆಚಾರ್ಯ:ವಿಧಾನ ಮಂಡಲದ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಪ್ರತಿಪಕ್ಷಗಳ ವಿರುದ್ಧ ಸರಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಯಾವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬುದು ನಮಗೆಲ್ಲ ಗೊತ್ತಿದ್ದ ವಿಚಾರವೇ. ಆ ನಿಟ್ಟಿನಲ್ಲಿ ಅಕ್ರಮ ಗಣಿಗಾರಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷಗಳು ಒತ್ತಡ ಹೇರುತ್ತಿರುವುದು ಸರಿಯಲ್ಲಿ ಎಂದರು.
ಅಕ್ರಮ ಗಣಿಗಾರಿಕೆ ಹಗರಣದ ತನಿಖೆ ನಡೆಸಲು ಲೋಕಾಯುಕ್ತರಿಗೆ ಪೂರ್ಣ ಅಧಿಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರು, ಧರಣಿ ಕೈಬಿಟ್ಟು ಕಲಾಪಕ್ಕೆ ಸಹಕರಿಸಬೇಕು ಎಂದು ಆಚಾರ್ಯ ತಿಳಿಸಿದ್ದಾರೆ.