ಹೊಗೇನಕಲ್‌ನಲ್ಲಿ ತಮಿಳುನಾಡು ಸರಕಾರ ಅನಧಿಕೃತವಾಗಿ ನಡೆಸುತ್ತಿರುವ ಕಾಮಗಾರಿ ನಿಲ್ಲಿಸುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ದುರಸ್ತಿ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ತೀವ್ರ ಆಕ್ಷೇಪದ ಮಧ್ಯೆಯೂ ತಮಿಳುನಾಡು ಕಾಮಗಾರಿ ಮುಂದುವರಿಸಿದ್ದು, ಪ್ರಧಾನಿಯವರು ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿದರು.
ಹೊಗೇನಕಲ್ ಸಮಸ್ಯೆ ಕುರಿತಂತೆ ಎರಡು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮಾತುಕತೆ ನಡೆಸಬೇಕು ಎನ್ನುವುದು ನಮ್ಮ ವಾದ. ಆದರೆ ತಮಿಳುನಾಡು ಸರಕಾರದ ಅಸಹಕಾರದಿಂದ ಅದು ಇದುವರೆಗೂ ಸಾಧ್ಯವಾಗಿಲ್ಲ. ಜತೆಗೆ ಸಮಸ್ಯೆ ಇತ್ಯರ್ಥಕ್ಕೆ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಕರ್ನಾಟಕ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಾತುಕತೆ ಮೂಲಕ ಎರಡು ರಾಜ್ಯಗಳ ನಡುವಿನ ಸಮಸ್ಯೆ ಇತ್ಯರ್ಥಗೊಳ್ಳಲಿದೆ. ಆದರೆ ಇದಕ್ಕೆ ತಮಿಳುನಾಡು ಸರಕಾರ ಸಿದ್ಧವಿಲ್ಲ ಎಂದು ದೂರಿದರು.
ಇದರಿಂದಾಗಿ ಎರಡು ರಾಜ್ಯಗಳ ನಡುವಿನ ಬಾಂಧವ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಕಾಮಗಾರಿ ಸ್ಥಗಿತಕ್ಕೆ ಸಂಬಂಧಿಸಿದಂತೆ ರಾಜ್ಯದ ಹಿರಿಯ ನ್ಯಾಯವಾದಿ ನಾರಿಮನ್ ಅವರೊಂದಿಗೆ ಚರ್ಚಿಸಿ, ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.