ಉಪಲೋಕಾಯುಕ್ತ ಹುದ್ದೆ ಭರ್ತಿ ಮಾಡಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸೋಮವಾರ ಉಪಲೋಕಾಯುಕ್ತರಾಗಿ ಶಶಿಧರ್ ಭೀಮರಾವ್ ಮಜಗೆ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ತಿಂಗಳಿನಿಂದ ಖಾಲಿ ಬಿದ್ದ ಉಪಲೋಕಾಯುಕ್ತ ಹುದ್ದೆ ಭರ್ತಿ ಮಾಡಿ ಹೆಚ್ಚಿನ ಅಧಿಕಾರ ನೀಡಿರುವುದರಿಂದ ಲೋಕಾಯುಕ್ತರು ಹೆಚ್ಚಿನ ಕೆಲಸ ಮಾಡಲು ಅನುಕೂಲವಾಗಲಿದೆ ಎಂದರು.
ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡುವ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಅದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಲೋಕಾಯುಕ್ತ ಸಂಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದರು.