ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆಗೆ ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದಿದ್ದು, ಲೂಟಿಕೋರರಿಂದ ರಾಜ್ಯವನ್ನುಳಿಸಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಕೈಗೊಳ್ಳಲು ಸಜ್ಜಾಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದರು.
ಮಂಗಳವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಮಾತ್ರವಲ್ಲ. ರಾಜ್ಯ ಸರಕಾರ ಮತ್ತು ಸಚಿವರ ವಿರುದ್ಧದ ಎಲ್ಲಾ ಭ್ರಷ್ಟಾಚಾರ ಆರೋಪಗಳ ಬಗ್ಗೆಯೂ ಸಿಬಿಐ ತನಿಖೆ ನಡೆಯಬೇಕು. ಲೋಕಾಯುಕ್ತರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸ ಇಲ್ಲ ಎಂದಲ್ಲ. ಆದರೆ ಅಕ್ರಮಗಳ ವ್ಯಾಪ್ತಿ ದೊಡ್ಡದಿರುವುದರಿಂದ ಸಿಬಿಐ ತನಿಖೆಗೆ ಒತ್ತಾಯಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು.
ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವ ಶೋಭಾ ಕರಂದ್ಲಾಜೆಯವರನ್ನು ಸಂಪುಟದಿಂದ ಕೈಬಿಟ್ಟಾಗ ಸಾರ್ವಜನಿಕವಾಗಿ ಅತ್ತು ಕರೆದು ನೋವು ತೋಡಿಕೊಂಡಿದ್ದ ಮುಖ್ಯಮಂತ್ರಿಗಳಿಗೆ ಲೋಕಾಯುಕ್ತ ನ್ಯಾ.ಹೆಗ್ಡೆಯಂತಹ ಪ್ರಾಮಾಣಿಕ ವ್ಯಕ್ತಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದಾಗ ಯಾವುದೇ ನೋವು ಉಂಟಾಗಲಿಲ್ಲ ಎಂದು ವ್ಯಂಗ್ಯವಾಡಿದರು.