ನಾವು ಒಂದಿಂಚೂ ಭೂಮಿಯನ್ನು ಒತ್ತುವರಿ ಮಾಡಿಲ್ಲ. ನಾವು ಅಕ್ರಮ ಗಣಿಗಾರಿಕೆ ಮಾಡುತ್ತಿದ್ದೇವೆ ಎಂದು ಪ್ರತಿಪಕ್ಷದವರು ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ ಎಂದು ಸಚಿವ ಶ್ರೀರಾಮುಲು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನ್ಯಾಯಾಲಯವೇ ನಮ್ಮ ಒಡೆತನದ ಕಂಪನಿ ಅಕ್ರಮ ಗಣಿಗಾರಿಕೆ ನಡೆಸುತ್ತಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ಒಂದು ವೇಳೆ ನಾವು ಅಕ್ರಮ ಗಣಿಗಾರಿಕೆ ನಡೆಸಿದ್ದೇ ಆದಲ್ಲಿ ಪ್ರತಿಪಕ್ಷದವರು ದಾಖಲೆ ತೋರಿಸಲಿ. ಆ ಕ್ಷಣದಲ್ಲಿಯೇ ನಾವು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುತ್ತೇವೆ ಎಂದು ಸವಾಲು ಹಾಕಿದರು.
ಪಕ್ಷದ ಒಪ್ಪಿಗೆ ಪಡೆದೇ ಬಳ್ಳಾರಿಯಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ಈ ಕುರಿತು ಪಕ್ಷದಲ್ಲಿ ಯಾವುದೇ ಅಪಸ್ವರ ಎದ್ದಿಲ್ಲ. ಪಾದಯಾತ್ರೆ ಹಮ್ಮಿಕೊಳ್ಳುವ ಅಗತ್ಯತೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನಂತಕುಮಾರ ಸೇರಿದಂತೆ ಹಿರಿಯರಿಗೆ ಮನವರಿಕೆ ಮಾಡಿಕೊಡಲಾಗುವುದು. ಅಲ್ಲದೇ, ಅವರ ಮನವೊಲಿಸಲಾಗುವುದು. ಈ ಪಾದಯಾತ್ರೆ ಮೂಲಕ ಕಾಂಗ್ರೆಸ್ಸಿಗರು ನಮ್ಮ ಮೇಲೆ ನಡೆಸಿರುವ ದೌರ್ಜನ್ಯವನ್ನು ರಾಜ್ಯದ ಜನತೆಗೆ ತಿಳಿಸಿಕೊಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಸಿದ್ದರಾಮಯ್ಯ ನಡೆಸುತ್ತಿರುವ ಪಾದಯಾತ್ರೆಗೆ ಅಡ್ಡಿಪಡಿಸಲು ನಾವ್ಯಾರು? ಕಾಂಗ್ರೆಸ್ಸಿಗರ ಮೇಲೆ ಹಲ್ಲೆ ನಡೆದರೆ ಶ್ರೀರಾಮುಲು ಅವರೇ ಹೊಣೆಗಾರರಾಗುತ್ತಾರೆ ಎಂದು ಹೇಳಿಕೆ ನೀಡಿರುವುದು ಸಿದ್ದರಾಮಯ್ಯನವರ ಬಾಲಿಶತನ ಪ್ರದರ್ಶಿಸುತ್ತದೆ ಎಂದರು.